ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ, ಆರಂಭಿಕ ಹಂತದಲ್ಲೇ ಸೋಂಕು ಪತ್ತೆಹಚ್ಚಿ, ಕಡಿವಾಣ ಹಾಕುವ ನಿರ್ಧಾರಕ್ಕೆ ಆರೋಗ್ಯ ಇಲಾಖೆ ಮುಂದಾಗಿದೆ. ಅದಕ್ಕಾಗಿ ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಆರೋಗ್ಯ ಇಲಾಖೆ ನಿರ್ಧಾರ ಮಾಡಿದೆ.
ಏಕೆ ಈ ಮಹತ್ವದ ನಿರ್ಧಾರ?
ರಾಷ್ಟ್ರೀಯ ಏಡ್ಸ್ ನಿಯಂತ್ರಣ ಸಂಸ್ಥೆ ಹಾಗೂ ಇತರ ಸಂಸ್ಥೆಗಳ ವರದಿಗಳ ಪ್ರಕಾರ, ಹೆಚ್‌ಐವಿ ಸೋಂಕಿತರ ಸಂಖ್ಯೆಯಲ್ಲಿ ಕರ್ನಾಟಕ ದೇಶದಲ್ಲೇ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸುಮಾರು 2.60 ಲಕ್ಷ ಮಂದಿ ಹೆಚ್‌ಐವಿ ಸೋಂಕಿನೊಂದಿಗೆ ಬದುಕುತ್ತಿದ್ದು, ಅವರಲ್ಲಿ ಸುಮಾರು 2.05 ಲಕ್ಷ ಮಂದಿ ಆಂಟಿ ರೆಟ್ರೋ ವೈರಲ್ ಥೆರಪಿ ಪಡೆಯುತ್ತಿದ್ದಾರೆ
ಇನ್ನೂ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ವಿಶೇಷವಾಗಿ 18 ರಿಂದ 35 ವರ್ಷದ ಯುವ ಸಮೂಹದಲ್ಲಿ ಸೋಂಕು ವೇಗವಾಗಿ ಹರಡುತ್ತಿರುವುದು ಇಲಾಖೆಯ ಆತಂಕಕ್ಕೆ ಕಾರಣವಾಗಿದೆ. ಇದೇ ವಯೋಮಾನದೊಳಗಿನ 18 ರಿಂದ 25 ವರ್ಷದ ಸುಮಾರು 7 ಸಾವಿರ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇದೆಲ್ಲದಕ್ಕಿಂತ ಮುಖ್ಯವಾಗಿ ರಾಜ್ಯದಲ್ಲಿ ಸುಮಾರು 54 ಸಾವಿರ ಮಂದಿಗೆ ತಮಗೆ ಸೋಂಕು ಇರುವುದೇ ತಿಳಿದಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಈ ಹಿನ್ನೆಲೆ ರಾಜ್ಯದ ಎಲ್ಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸುವ ಯೋಜನೆಯನ್ನು ಆರೋಗ್ಯ ಇಲಾಖೆ ಹಾಕಿಕೊಂಡಿದೆ. ಈ ವಿಶೇಷ ಅಭಿಯಾನಕ್ಕೆ ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಸಹಕರಿಸುವಂತೆ ಆರೋಗ್ಯ ಇಲಾಖೆ ಮುಖ್ಯಸ್ಥರು ಮನವಿ ಮಾಡಿದ್ದಾರೆ.
ಗೌಪ್ಯತೆ ಕಾಪಾಡಲು QR ಕೋಡ್
ಇದರೊಂದಿಗೆ ವಿದ್ಯಾರ್ಥಿಗಳ ಗೌಪ್ಯತೆ ಕಾಪಾಡುವ ಉದ್ದೇಶದಿಂದ ʻನಿಮ್ಮ ಹೆಚ್‌ಐವಿ ಸ್ಥಿತಿ ತಿಳಿದುಕೊಳ್ಳಿʼ ಎಂಬ QR ಕೋಡ್ ಆಧಾರಿತ ಸ್ವಯಂ ಅಪಾಯ ಮೌಲ್ಯಮಾಪನ ವ್ಯವಸ್ಥೆಯನ್ನೂ ಪರಿಚಯಿಸಲಾಗುತ್ತಿದೆ. ಇದರ ಮೂಲಕ ವಿದ್ಯಾರ್ಥಿಗಳು ತಮ್ಮ ಹೆಚ್‌ಐವಿ ಅಪಾಯದ ಮಟ್ಟವನ್ನು ಗೌಪ್ಯವಾಗಿ ಮತ್ತು ಸುಲಭವಾಗಿ ಪರಿಶೀಲಿಸಿಕೊಳ್ಳಲು ಅವಕಾಶ ದೊರೆಯಲಿದೆ.
ಒಟ್ಟಿನಲ್ಲಿ ಆರೋಗ್ಯ ಇಲಾಖೆಯ ಈ ಮಹತ್ವದ ಕ್ರಮವು, ಆರಂಭಿಕ ಹಂತದಲ್ಲೇ ಯುವಜನರಲ್ಲಿ ಕಾಣಿಸಿಕೊಳ್ಳುವ ಹೆಚ್‌ಐವಿ ಸೋಂಕನ್ನು ಪತ್ತೆಹಚ್ಚಿ ಚಿಕಿತ್ಸೆ ಕೊಡುವುದು ಹಾಗೂ ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ.




