ಬೆಂಗಳೂರು: ಕಾಂಗ್ರೆಸ್ ಸರ್ಕಾರ ಸಂಪನ್ಮೂಲದ ಗ್ಯಾರಂಟಿ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆಗಳನ್ನು ತಂದಿದೆ. ಕಾಂಗ್ರೆಸ್ ಶಾಸಕರೇ ಸರ್ಕಾರಕ್ಕೆ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ಸರ್ಕಾರ ಬಂದರೂ ಸಾಲ ಮಾಡಲೇಬೇಕು. ಇಂತಹ ಸ್ಥಿತಿಯಲ್ಲಿ ಸಂಪನ್ಮೂಲದ ಗ್ಯಾರಂಟಿಯೇ ಇಲ್ಲದೆ, ಜನರಿಗೆ ಟೋಪಿ ಹಾಕಿ ಗ್ಯಾರಂಟಿ ಯೋಜನೆ ತರಲಾಗಿದೆ. ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂಚೆ ಎಚ್ಚೆತ್ತುಕೊಳ್ಳಲಿ ಎಂದರು.
ಬೆಂಗಳೂರಿಗೆ ನಿಗದಿಯಾದ ಅನುದಾನಗಳನ್ನು ಈ ಹಿಂದೆಯೂ ವಾಪಸ್ ಪಡೆಯಲಾಗಿದೆ. ನಗರದಲ್ಲಿ ಪ್ರವಾಹದ ನಿಯಂತ್ರಣಕ್ಕಾಗಿ ಯೋಜನೆ ರೂಪಿಸಲು ಬಿಜೆಪಿ ಸರ್ಕಾರ ಅನುದಾನ ಮೀಸಲಿಟ್ಟಿತ್ತು. ಅದನ್ನು ಗ್ಯಾರಂಟಿಗೆ ನೀಡಲಾಗಿದೆ. ಪಾದಚಾರಿ ಮಾರ್ಗ, ಮೇಲ್ಸೇತುವೆ, ರಾಜಕಾಲುವೆ ಸೇರಿದಂತೆ ಎಲ್ಲಾ ಅಭಿವೃದ್ಧಿ ಯೋಜನೆಗಳ ಹಣವನ್ನು ಗ್ಯಾರಂಟಿಗೆ ವರ್ಗಾಯಿಸಲಾಗಿದೆ. ಬಿಬಿಎಂಪಿ ಅನುದಾನ ಬಿಟ್ಟು, ಬಿಜೆಪಿ ಸರ್ಕಾರ 8-9 ಸಾವಿರ ಕೋಟಿ ರೂ. ನೀಡಿತ್ತು. ಈಗ ಸರ್ಕಾರ ಪಾಪರ್ ಆಗಿದೆ ಎಂದು ಟೀಕಿಸಿದರು.