Ad imageAd image

ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ

ratnakar
ರಾಜ್ಯಾದ್ಯಂತ ಗ್ರಾಮ ಪಂಚಾಯಿತಿ ನೌಕರರ ಅನಿರ್ದಿಷ್ಟಾವಧಿ ಮುಷ್ಕರ
WhatsApp Group Join Now
Telegram Group Join Now

ಬೆಂಗಳೂರು: ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಬಲವರ್ಧನೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳು, ನೌಕರರು, ಸದಸ್ಯರು ತಮ್ಮ ಸೇವೆ ಸ್ಥಗಿತಗೊಳಿಸಿ ಸ್ವಾತಂತ್ರ್ಯ ಉದ್ಯಾನದಲ್ಲಿ ಶುಕ್ರವಾರ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದು, ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳ ಸೇವೆ ಸ್ತಬ್ಧಗೊಂಡಿದೆ.

ಆಡಳಿತ ವರ್ಗ ಕಾರ್ಯ ನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ರಾಜ್ಯ ಸರಕಾರ ಮತ್ತು ಪಂಚಾಯತ್‌ ರಾಜ್‌ ಇಲಾಖೆಗೆ ಹಲವು ವರ್ಷಗಳಿಂದ ಮನವಿ ಸಲ್ಲಿಸಿದರೂ ಸ್ಪಂದಿಸಿಲ್ಲ. ಈ ಧೋರಣೆ ಖಂಡಿಸಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯ ಎಲ್ಲ ವೃಂದ ಸಂಘಗಳು ಹಾಗೂ ಗ್ರಾಪಂ ಸದಸ್ಯರ ಒಕ್ಕೂಟಗಳು ಮುಷ್ಕರ ಆರಂಭಿಸಿವೆ.

ರಾಜ್ಯದ ಎಲ್ಲ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಹುದ್ದೆಗಳನ್ನು ‘ಬಿ’ ಗುಂಪಿನ ಹುದ್ದೆಗಳಾಗಿ ಉನ್ನತೀಕರಿಸಬೇಕು, ವೇತನ ಶ್ರೇಣಿ ನಿಗದಿ ಮಾಡಬೇಕು, ಮುಂಬಡ್ತಿ ವಂಚಿತರಿಗೆ ಕಾಲಮಿತಿಯೊಳಗೆ ಮುಂಬಡ್ತಿ ನೀಡಬೇಕು, ಪಂಚಾಯತ್‌ ರಾಜ್‌ ಇಲಾಖೆಗೆ ಬೇರೆ ಇಲಾಖೆ ಅಧಿಕಾರಿಗಳು ಮತ್ತು ನೌಕರರು ನಿಯೋಜಿಸಿರುವುದನ್ನು ರದ್ದುಪಡಿಸಬೇಕು, ಗ್ರಾಪಂ ಅಧ್ಯಕ್ಷ ಮತ್ತು ಸದಸ್ಯರ ಗೌರವ ಧನ ಹೆಚ್ಚಿಸಬೇಕು, ಜೇಷ್ಠತಾ ಪಟ್ಟಿ ಅಂತಿಮಗೊಳಿಸಬೇಕು, ಕಾರ್ಮಿಕರ ರಾಜ್ಯ ವಿಮೆ ಮತ್ತು ಭವಿಷ್ಯ ನಿಧಿ ನೀಡಬೇಕು ಹಾಗೂ ಬಡ್ತಿಯಲ್ಲಿನ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸಿ, ನೇರ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಪ್ರತಿಭಟನಾಕಾರರು ರಾಜ್ಯ ಸರಕಾರವನ್ನು ಆಗ್ರಹಿಸಿದರು.

ಒಕ್ಕೂಟದ ಅಧ್ಯಕ್ಷ ರಾಜು ವಾರದ ಮಾತನಾಡಿ, ‘‘ಪಂಚಾಯತ್‌ ರಾಜ್‌ ಇಲಾಖೆಯ ಗೆಜೆಟೆಡ್‌ ಅಧಿಕಾರಿಗಳಿಗೆ ಜಿಪಂ ಸಿಇಒ ಹುದ್ದೆಗಳಲ್ಲಿ ಮೀಸಲು ಒದಗಿಸಬೇಕು. ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ ಕಾಯಿದೆಯಲ್ಲಿರುವ ಜವಾಬ್ದಾರಿ ನಕ್ಷೆಯಂತೆ ಗ್ರಾಮ ಪಂಚಾಯಿತಿಗಳಿಗೆ ಅಧಿಕಾರ ನೀಡಬೇಕು,’’ ಎಂದು ಒತ್ತಾಯಿಸಿದರು.

WhatsApp Group Join Now
Telegram Group Join Now
Share This Article