ಬೆಳಗಾವಿ: 2ಎ ಮೀಸಲಾತಿ ವಿಚಾರವಾಗಿ ಪಂಚಮಸಾಲಿ ಸಮುದಾಯ ನಾಳೆ ಸುವರ್ಣ ಸೌಧ ಮುತ್ತಿಗೆಗೆ ಸಜ್ಜಾಗಿದೆ. ಈ ವಿಚಾರವಾಗಿ ಇಂದು ಸದನದ ಒಳಗೂ ಮತ್ತು ಹೊರಗೂ ಗದ್ದಲ ಉಂಟಾಗಿದೆ. ಸದನದಲ್ಲಿ ಶಾಸಕ ಯತ್ನಾಳ್ ಮೀಸಲಾತಿ ಬಗ್ಗೆ ಪ್ರಸ್ತಾಪಿಸಿದ್ದು, ಈ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನದ ಮುಂದೆ ಮಂಡಿಸುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.
ಬೆಳಗಾವಿ ಸುವರ್ಣ ಸೌಧದಲ್ಲಿ ಪತ್ರಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಪಂಚಮಸಾಲಿಗಳನ್ನು 2ಎ ಸೇರಿಸಲು ಬಹಳ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ನಾನು ಮುಖ್ಯಮಂತ್ರಿಯಾದ ಮೇಲೆ ಜಯಮೃತ್ಯುಂಜಯ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಮುಖಂಡರೊಂದಿಗೆ ಎರಡು ಬಾರಿ ಸಭೆ ನಡೆಸಿದ್ದೇನೆ. ಪಂಚಮಸಾಲಿಗಳು ಮೀಸಲಾತಿ ಕೇಳಲು ನಾನು ಅಡ್ಡಿಯಾಗಿಲ್ಲ ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಹಿಂದುಳಿದ ವರ್ಗಗಳನ್ನು ಪ್ರವರ್ಗ-1, ಪ್ರವರ್ಗ-2ಎ, ಪ್ರವರ್ಗ-3ಎ ಹಾಗೂ ಪ್ರವರ್ಗ-3ಬಿ ಎಂದು ವಿಂಗಡಸಲಾಗಿದೆ. ವೀರಶೈವ ಲಿಂಗಾಯಿತ ಹಾಗೂ ಪಂಚಮಸಾಲಿ ಜಾತಿಗಳು 3ಬಿ ಅಡಿ ಮೀಸಲಾತಿ ಪಡೆಯುತ್ತಿವೆ. ಪಂಚಮಸಾಲಿಗಳನ್ನು 2ಎ ಸೇರಿಸಲು ರಾಜ್ಯದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವರದಿ ಪಡೆಯುವುದು ಅವಶ್ಯಕವಾಗಿದೆ. ಈ ಹಿನ್ನಲೆಯಲ್ಲಿ ಆಯೋಗದ ಮುಂದೆ ಮೀಸಲಾತಿ ವಿಚಾರವನ್ನು ಮಂಡಿಸುವಂತೆ ಪಂಚಮಸಾಲಿ ಹೋರಟಗಾರರಿಗೆ ತಿಳಿಸಿದ್ದೇನೆ ಎಂದಿದ್ದಾರೆ.
ಈ ಹಿಂದಿನ ಬಸವರಾಜ ಬೊಮ್ಮಾಯಿ ಸರ್ಕಾರ ಪಂಚಮಸಾಲಿಗಳನ್ನು 2ಎ ಸೇರಿಸಿಲ್ಲ ಬದಲಾಗಿ, ಅಲ್ಪಸಂಖ್ಯಾತ ಮುಸ್ಲಿಂರಿಗೆ ನೀಡಿದ್ದ ಶೇ.4 ರಷ್ಟು ಮೀಸಲಾತಿಯನ್ನು ರದ್ದುಪಡಿಸಿ, 3ಎ ಹಾಗೂ 3ಬಿಗೆ ತಲಾ ಶೇ.2 ರಂತೆ ಮೀಸಲಾತಿ ಹಂಚಿಕೆ ಮಾಡಿತ್ತು. ಇದನ್ನು ಆಕ್ಷೇಪಿಸಿ ಮುಸ್ಲಿಂರು ಸರ್ವೋಚ್ಛ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಹಿಂದಿನ ರಾಜ್ಯ ಸರ್ಕಾರ ಮುಸ್ಲಿಂರ ಮೀಸಲಾತಿ ರದ್ದು ಪಡಿಸಿಲ್ಲ. ಯತಾಸ್ಥಿತಿ ಮುಂದುವರಿಸಿಕೊಂಡು ಹೋಗುವುದಾಗಿ ಅಫಿಡೆವಿಡ್ ಸಲ್ಲಿಸಿದೆ. ಇದರ ಆಧಾರದ ಮೇಲೆ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿದೆ. ಈ ಆದೇಶವನ್ನು ಬದಲಾಯಿಸಲು ಯಾರಿಂದಲೂ ಸಾಧ್ಯವಿಲ್ಲ. ಇದರ ಪ್ರತಿಯನ್ನು ನಾಳೆಯೇ ಸದನ ಮುಂದೆ ಮಂಡಿಸುವುದಾಗಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಇನ್ನು ಈ ವೇಳೆ ಶಾಸಕ ಅರವಿಂದ ಬೆಲ್ಲದ್ ಮಾತನಾಡಿ, ಮಂಗಳವಾರ ಪಂಚಮಸಾಲಿ 2ಎ ಮೀಸಲಾತಿ ಹೋರಾಟ ನಡೆಯಲಿದೆ. ಆದ್ದರಿಂದ ಸರ್ವೋಚ್ಛ ನ್ಯಾಯಾಲಯದ ಆದೇಶವನ್ನು ಬುಧವಾರ ಸದನದ ಮುಂದೆ ಮಂಡಿಸುವಂತೆ ಮುಖ್ಯಮಂತ್ರಿಗಳಲ್ಲಿ ಸಭಾಧ್ಯಕ್ಷರ ಮೂಲಕ ಕೋರಿದರು.