ಬೆಳಗಾವಿ: ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಕೊಡಗು ಭೇಟಿ ನೀಡಿದ ಸಂದರ್ಶನದಲ್ಲಿ ಬಿಜೆಪಿ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿರುವುದನ್ನು ಖಂಡಿಸಿ ಶನಿವಾರ ನಗರದ ಚನ್ನಮ್ಮ ವೃತ್ತದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಯುವ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯನವರು ಕೊಡಗು ನೆರೆ ಸಂತ್ರಸ್ತರ ಸಮಸ್ಯೆ ಆಲಿಸಲು, ಹಾನಿ ಪ್ರದೇಶವನ್ನು ಪರಿಶೀಲನೆ ನಡೆಸಲು ಹೋದ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ವಿಪಕ್ಷ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದು ತಮ್ಮ ಕೀಳುಮಟ್ಟವನ್ನು ಪ್ರದರ್ಶಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೊಡಗಿನ ಪೊನ್ನಂಪೇಟೆ ತಾಲೂಕಿನ ತಿತಿಮತಿಯಲ್ಲಿ ಪ್ರತಿಭಟನೆ ನಡೆಸಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಪಡಿಸಿಕೊಂಡಿದ್ದರೆ ರಾಜ್ಯದಲ್ಲಿ ಇಂಥ ಘಟನೆ ನಡೆಯುತ್ತಿರಲಿಲ್ಲ. ದುರುದ್ದೇಶ ಪೂರ್ವಕವಾಗಿಯೇ ಬಿಜೆಪಿಯವರು ಈ ಕೃತ್ಯ ಎಸಗಿದ್ದಾರೆ ಎಂದು ಪ್ರತಿಭಟನಾಕಾರರು ಅಸಮಾಧಾನ ಹೊರ ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳ್ಕರ್, ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯನವರು ಕೊಡಗು ಜಿಲ್ಲೆಗೆ ಸಂತ್ರಸ್ತರ ನೋವು ಆಲಿಸಲು ಹೋಗಿದ್ದರು. ಆಗ ಮೊಟ್ಟೆ ಎಸೆದು ಅವಮಾನ ಮಾಡಿದ್ದಾರೆ. ಅವರ ಮೇಲೆ ಮೊಟ್ಟೆ ಎಸೆದಿರುವುದು ಇದು ರಾಜ್ಯದ ಜನರನ್ನು ಅವಮಾನಿಸಿದಂತೆ ಎಂದರು.
ಇಂಥ ಕೃತ್ಯಗಳನ್ನು ಎಸಗುವ ಬದಲಿಗೆ ಬಡ ಜನರಿಗೆ ಮಳೆಯಿಂದ ಕುಸಿದ ಮನೆಗಳ ಪರಿಹಾರ ಕೊಡಿಸಿ ಸರಕಾರಕ್ಕೆ ಬಿಸಿ ಮುಟ್ಟಿಸಿ ಎಂದು ಬಿಜೆಪಿ ಕಾರ್ಯಕರ್ತರಿಗೆ ಮೃಣಾಲ್ ಸವಾಲೆಸೆದರು.
ಡಬಲ್ ಎಂಜಿನ್ ಸರಕಾರದಿಂದ ಉಜ್ವಲ್ ಯೋಜನೆ ಕೊಟ್ಟು ಗ್ಯಾಸ್ ದರ ದುಪ್ಪಟ್ಟು ಮಾಡಲಾಗಿದೆ. ರಾಜ್ಯದಲ್ಲಿ ಪ್ರತಿ ಹಂತದಲ್ಲಿಯೂ ಭ್ರಷ್ಟಾಚಾರ ನಡೆದಿದೆ. ಸರಕಾರವೇ ಶೇ. 40 ಕಮಿಷನ್ ದಂಧೆಯಲ್ಲಿ ಮುಳುಗಿ ಹೋಗಿದೆ. ಬಿಜೆಪಿ ಕಾರ್ಯಕರ್ತರಿಗೆ ಜನರ, ಸಮಾಜದ ಬಗ್ಗೆ ನಿಜವಾದ ಕಳಕಳಿ ಇದ್ದರೆ ಸರಕಾರಕ್ಕೆ ಎಚ್ಚರಿಸುವ ಕೆಲಸ ಮಾಡಲಿ ಎಂದು ವಾಗ್ದಾಳಿ ನಡೆಸಿದರು.ಕಾಂಗ್ರೆಸ್ ಪಕ್ಷದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.