ನವದೆಹಲಿ: ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಬೆಂಗಳೂರಿನಿಂದ ಮೈಸೂರಿಗೆ ನಡೆಸಲು ಮುಂದಾಗಿರುವ ಪಾದಯಾತ್ರೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಷರತ್ತು ಹಾಕಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಹಾಸನದ ಮಾಜಿ ಬಿಜೆಪಿ ಶಾಸಕ ಪ್ರೀತಂ ಗೌಡ ವಿರುದ್ಧ ಮಂಗಳವಾರ ಕಿಡಿ ಕಾರಿದ್ದ ಹೆಚ್ಡಿ ಕುಮಾರಸ್ವಾಮಿ ಪಾದಯಾತ್ರೆಗೆ ಜೆಡಿಎಸ್ ಬೆಂಬಲ ಇಲ್ಲ ಎಂದು ಬಹಿರಂಗವಾಗಿಯೇ ಹೇಳಿಕೆ ನೀಡಿದ್ದರು.
ಬಹಿರಂಗ ಹೇಳಿಕೆ ನೀಡುವ ಮೂಲಕ ರಾಜ್ಯದ-ಬಿಜೆಪಿ ಜೆಡಿಎಸ್ ಮೈತ್ರಿಗೆ ಬಗ್ಗೆ ಪ್ರಶ್ನೆಗಳು ಎದ್ದ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್ ಚುರುಕಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಅವರು ದೂರವಾಣಿ ಮೂಲಕ ಹೆಚ್ಡಿಕೆ ಜೊತೆ ಮಾತನಾಡಿ ಪಾದಯಾತ್ರೆಯಲ್ಲಿ ಭಾಗಿಯಾಗುವಂತೆ ಮನವಿ ಮಾಡಿದ್ದಾರೆ. ಈ ವೇಳೆ ಪ್ರೀತಂಗೌಡ ಪಾದಯಾತ್ರೆಗೆ ಬಾರದೇ ಇದ್ದರೆ ನಾನು ಭಾಗಿಯಾಗುತ್ತೇನೆ ಎಂದು ಷರತ್ತು ವಿಧಿಸಿದ್ದಾರೆ.