ಬೆಂಗಳೂರು: ಭ್ರಷ್ಟಾಚಾರ ಆರೋಪ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲವು ನೀಡಿರುವ ಆದೇಶವನ್ನು ಪ್ರಶ್ನೆ ಮಾಡಿ ಮಾಜಿ ಸಿಎಂ ಬಿಎಸ್ ಯಡಿಯ್ಯೂರಪ್ಪ ಸುಪ್ರಿಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಭ್ರಷ್ಟಾಚಾರ ಆರೋಪ ಮಾಡಿ ಯಡಿಯೂರಪ್ಪನವರ ವಿರುದ್ಧ ಟಿ. ಜೆ ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ರಾಜ್ಯಪಾಲರ ಪೂರ್ವಾನುಮತಿ ನೀಡಿದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಟಿ.ಜೆ. ಅಬ್ರಹಾಂ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ದೂರನ್ನು ಮರುಪರಿಶೀಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದ್ದು, ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತಕ್ಕೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೂಚನೆ ನೀಡಿತ್ತು. ಈ ಬಗ್ಗೆ ಲೋಕಾಯುಕ್ತ ಪೊಲೀಸರು ಯಡಿಯೂರಪ್ಪ, ಅವರ ಪುತ್ರ ವಿಜಯೇಂದ್ರ, ಸಚಿವ ಎಸ್.ಟಿ. ಸೋಮಶೇಖರ್ ಸೇರಿದಂತೆ 9 ಮಂದಿಯ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಎಫ್‌ಐಆರ್ ದಾಖಲಿಸಿದ್ದಾರೆ.
ಎಫ್‌ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆಯನ್ನು ಪ್ರಶ್ನಿಸಿ ಯಡಿಯೂರಪ್ಪ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಸೋಮವಾರ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠದ ಮುಂದೆ ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ಹೇಳಲಾಗಿದೆ.