ಬೆಂಗಳೂರು: ಕಾಂಗ್ರೆಸ್ ಚುನಾವಣಾಪೂರ್ವ ಗ್ಯಾರಂಟಿಗಳಲ್ಲಿ ಒಂದಾದ ಉಚಿತ ಅಕ್ಕಿ ವಿತರಣೆಗೆ ತೊಡಕಾಗಿರುವುದರಿಂದ ಐದು ಕೆಜಿ ಅಕ್ಕಿ ಬದಲಿಗೆ ಹಣ ನೀಡಲು ಕರ್ನಾಟಕ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ದಾರರಿಗೆ ಮಾಸಿಕ ತಲಾ 170 ರೂ. ನೀಡುತ್ತೇವೆ ಎಂದು ಆಹಾರ ಸಚಿವ ಮುನಿಯಪ್ಪ ಮಾಹಿತಿ ನೀಡಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರಾದ ಎಚ್ಕೆ ಪಾಟೀಲ್ ಹಾಗೂ ಕೆಎಚ್ ಮುನಿಯಪ್ಪ ಸಂಪುಟ ಸಭೆಯ ನಿರ್ಧಾರಗಳನ್ನು ಪ್ರಕಟಿಸಿದರು. ಇದರೊಂದಿಗೆ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ದಾರರಿಗೆ 5 ಕೆಜಿ ಅಕ್ಕಿ ಹಾಗೂ ಇನ್ನುಳಿದ 5ಕೆಜಿ ಅಕ್ಕಿಯ ಬದಲು ಹಣ ದೊರೆಯಲಿದೆ ಎಂದರು.