ರಾಯಚೂರು: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಕರಣಗಳ ಸಂಖ್ಯೆ ಲೆಕ್ಕಕ್ಕೆ ಸಿಕ್ಕರೂ, ಖಾಸಗಿ ಆಸ್ಪತ್ರೆಗಳಲ್ಲೇ ಹೆಚ್ಚು ರೋಗಿಗಳು ದಾಖಲಾಗುತ್ತಿರುವುದರಿಂದ ಸಾರ್ವಜನಿಕರು ಆತಂಕಕ್ಕೊಳಗಾಗಿದ್ದಾರೆ. ಸೊಳ್ಳೆಗಳ ನಿಯಂತ್ರಣಕ್ಕೆ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಜನ ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಕಳೆದ ಒಂದೂವರೆ ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಇದುವರೆಗೆ 18 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇನ್ನೂ 300ಕ್ಕೂ ಹೆಚ್ಚು ಮಾದರಿಗಳ ವರದಿ ಬರುವುದು ಬಾಕಿಯಿದೆ. ಇದು ಸರ್ಕಾರಿ ಆಸ್ಪತ್ರೆಗಳ ವರದಿಯಾದರೆ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳ ಸಂಖ್ಯೆ ಇನ್ನೂ ಹೆಚ್ಚಿದೆ. ಹೀಗಾಗಿ ಸಾರ್ವಜನಿಕರು ಆತಂಕಗೊಂಡಿದ್ದಾರೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.