ಮುಂಬೈ: ಮಹಾರಾಷ್ಟ್ರ ಸಿಎಂ ಸ್ಥಾನವನ್ನು ದೇವೇಂದ್ರ ಫಡ್ನವಿಸ್ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅಲಂಕರಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಏಕನಾಥ್ ಶಿಂಧೆ ಅವರು ಗೃಹ ಮತ್ತು ನಗರಾಭಿವೃದ್ಧಿ ಇಲಾಖೆಗಳಿಗೆ ಬೇಡಿಕೆಯಿಟ್ಟಿದ್ದಾರೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಎಲ್ಲವೂ ಅಂದುಕೊಂಡಂತೆ ನಡೆದರೆ, ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಇಂದೇ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಹೆಸರು ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆಯಿದೆ ಎಂದು ವರದಿಗಳು ತಿಳಿಸಿವೆ.
ಗುರುವಾರ ರಾತ್ರಿ ನವದೆಹಲಿಯಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಮಹಾಯುತಿ ನಾಯಕರ ಮಹತ್ವದ ಸಭೆ ನಡೆಯಿತು. ಮಹಾರಾಷ್ಟ್ರದ ನಿಯೋಜಿತ ಮುಖ್ಯಮಂತ್ರಿ ಮತ್ತು ಶಿವಸೇನೆ ನಾಯಕ ಏಕನಾಥ್ ಶಿಂಧೆ (Eknath Shinde), ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಅಜಿತ್ ಪವಾರ್ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮೊದಲಾದ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಗೂ ಮುನ್ನ ಏಕನಾಥ್ ಶಿಂಧೆ ಅವರು ಕೃಷ್ಣ ಮೆನನ್ ಮಾರ್ಗದಲ್ಲಿರುವ ನಿವಾಸದಲ್ಲಿ ಅಮಿತ್ ಶಾ (Amit Shah) ಅವರನ್ನ ಭೇಟಿಯಾದರು. ನಂತರ ಫಡ್ನವಿಸ್, ಅಜಿತ್ ಪವಾರ್ ಚರ್ಚೆಯಲ್ಲಿ ಪಾಲ್ಗೊಂಡರು. ಮುಂಬೈನಲ್ಲಿ ಮತ್ತೊಂದು ಸಭೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.