ಕಾರವಾರ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ಪತ್ನಿಯ ಕತ್ತು ಸೀಳಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಮುರುಡೇಶ್ವರದಲ್ಲಿ ನಡೆದಿದೆ.
ಹತ್ಯೆಯಾದ ಮಹಿಳೆಯನ್ನು ನಂದಿನಿ ನಾಯ್ಕ (30) ಎಂದು ಗುರುತಿಸಲಾಗಿದೆ. ಮಹಿಳೆಯ ಪತಿ ಲೋಕೇಶ್ ನಾಯ್ಕ (34) ಕೊಲೆ ಆರೋಪಿಯಾಗಿದ್ದಾನೆ. ಇಬ್ಬರ ನಡುವೆ ಗಲಾಟೆ ನಡೆದಿದೆ ಇದೇ ಕಾರಣಕ್ಕೆ ಆರೋಪಿ ಏಕಾಏಕಿ ಚಾಕುವಿನಿಂದ ಕತ್ತಿನ ಬಳಿ ಹಲ್ಲೆ ನಡೆಸಿದ್ದಾನೆ. ಈ ವೇಳೆ ಮಹಿಳೆ ಸಹಾಯಕ್ಕಾಗಿ ಹೊರಗೆ ಓಡಿ ಬಂದಿದ್ದು, ಜನ ಸೇರುವಷ್ಟರಲ್ಲಿ ತೀವ್ರ ರಕ್ತಸ್ರಾವದಿಂದ ಆಕೆ ಮೃತಪಟ್ಟಿದ್ದಾಳೆ.
ಕೊಲೆ ಮಾಡಿದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದ. ಆತನನ್ನು ಹೋಟೆಲ್ ಒಂದರಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಲ್ಪಿ ಕೆಲಸ ಮಾಡುತ್ತಿದ್ದ ಲೋಕೆಶ್ ನಾಯ್ಕ ಕಳೆದ ಮೂರು ದಿನಗಳಿಂದ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ.