ಬೆಂಗಳೂರು: ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುವ ಮೂಲಕ ಹೈಕಮಾಂಡ್ ಗಮನ ಸೆಳೆದು ಮುಖ್ಯಮಂತ್ರಿ ಕುರ್ಚಿಗೆ ನನ್ನದೂ ಒಂದು ಇರಲಿ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಟವಲ್ ಹಾಕುತ್ತಿದ್ದಾರೆ. ರೈತರ (Farmers) ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok) ಟೀಕಿಸಿದ್ದಾರೆ.
ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಪ್ರತಿಕ್ರಿಯಿಸಿದರು.
ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದೀರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ ಎಂದು ಅಶೋಕ್ ಹೇಳಿದ್ದಾರೆ.