ಬೆಳಗಾವಿ : ರಾಯಚೂರು ಮತ್ತು ಧಾರವಾಡದಲ್ಲಿ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್) ಸ್ಥಾಪನೆ ಮಾಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ತಿಳಿಸಿದರು.
ವಿಧಾನಸಭೆಯಲ್ಲಿದ್ದು ರಾಯಚೂರು ಗ್ರಾಮೀಣ ಶಾಸಕ ಬಸವನಗೌಡ ದದ್ದಲ್ ಅವರ ಗಮನಸೆಳೆಯುವ ಪ್ರಶ್ನೆಗೆ ಉತ್ತರಿಸಿದ ಅವರು ರಾಯಚೂರು ಮತ್ತು ಧಾರವಾಡದಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ಶಿಫಾರಸ್ಸು ಮಾಡಲಾಗಿದೆ;ಆದರೇ ಈ ಬಗ್ಗೆ ಕೇಂದ್ರ ಸರಕಾರವೇ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ ಎಂದು ಅವರು ಹೇಳಿದರು.
ಈ ಹಿಂದೆ ರಾಮನಗರ,ವಿಜಯಪುರ,ಧಾರವಾಡದಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿತ್ತು. ರಾಜ್ಯದ ಶಿಫಾರಸ್ಸು ಆಧರಿಸಿ ಕೇಂದ್ರದ ತಂಡ ಈಗಾಗಲೇ ಧಾರವಾಡದ ಇಟಗಟ್ಟ ಗ್ರಾಮದ ಬಳಿ ಗುರುತಿಸಲಾದ ಭೂಮಿ ಪರಿಶೀಲನೆ ಮಾಡಿಕೊಂಡು ಹೋಗಿದೆ ಎಂದು ಅವರು ತಿಳಿಸಿದರು.
ಈ ಮಧ್ಯೆ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡಬೇಕು ಎಂಬ ಬೇಡಿಕೆ ಬಂದ ಕಾರಣ ರಾಯಚೂರಿನಲ್ಲಿ ಏಮ್ಸ್ ಮಾದರಿ ಆಸ್ಪತ್ರೆಗೆ 2021 ಏ.9ರಂದು ಪತ್ರ ಬರೆಯಲಾಗಿದೆ. ಹೀಗೆಯೇ ಧಾರವಾಡ ಮತ್ತು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಬೇಕಾದ ಭೂಮಿ, ನೀರು,ವಿದ್ಯುತ್ ಮತ್ತು ರಸ್ತೆ ಸಂಪರ್ಕ ಇರುವುದಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ ಎಂದು ಅವರು ತಿಳಿಸಿದರು.
ಏಮ್ಸ್ ಸ್ಥಾಪನೆ ಕುರಿತು ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಕೇಂದ್ರಕ್ಕೆ ಇರುವುದರಿಂದ ಅವರು ರಾಜ್ಯಕ್ಕೆ ಒಂದು ಅಥವಾ ಎರಡು ಏಮ್ಸ್ ನೀಡುವರೋ ಎಂಬುದನ್ನು ನೋಡಬೇಕಿದೆ ಎಂದರು.
ಇದಕ್ಕೂ ಮೊದಲು ಶಾಸಕ ಬಸವನಗೌಡ ದದ್ದಲ್ ಅವರು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ಮನವಿ ಮಾಡಿದರು ಹಾಗೂ ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಬೇಕಾದ ಅಗತ್ಯ ಸೌಕರ್ಯಗಳು ಮತ್ತು ಏಮ್ಸ್ ಅಗತ್ಯತೆ ಬಗ್ಗೆ ಸದನಕ್ಕೆ ವಿವರಿಸಿದರು.