ಯಮಕನಮರಡಿ: ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಹೆಚ್ಚಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಯಮಕನಮರಡಿ ಮತಕ್ಷೇತ್ರದ ಚಿಲಭಾಂವಿ ಗ್ರಾಮದಲ್ಲಿ ನಡೆದ ಸೆಂಟ್ ಥೆರೆಸಾ ಶಾಲಾ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತಮಾಡಿದ ಅವರು, ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ಸೆಂಟ್ ಥೆರೆಸಾ ಶಾಲೆಗೆ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಒಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಶಿಕ್ಷಕರಷ್ಟೇ ಪೋಷಕರು ಕೂಡ ಮುಖ್ಯ. ಹೀಗಾಗಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಕಾಳಜಿ ವಹಿಸಬೇಕು. ಶಿಕ್ಷಕರು ಶೈಕ್ಷಣಿಕವಾಗಿ ಹಿಂದುಳಿದ ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಕಾಳಜಿ ವಹಿಸಿ ಅವರ ಪ್ರಗತಿಗೆ ಪೂರಕವಾಗಿ ಕಾರ್ಯೋನ್ಮುಖರಾಗಬೇಕು. ವಿದ್ಯಾರ್ಥಿಗಳ ಸಮಸ್ಯೆ, ಕಷ್ಟ ದುಃಖಗಳನ್ನು ಆಲಿಸಿ ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಶಿಕ್ಷಕರು ಮಕ್ಕಳನ್ನು ಕೇವಲ ಶಾಲೆಗೆ ಸೇರಿಸಿ ಸುಮ್ಮನಾಗದೇ ಅವರ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕೆಂದರು.
ಶಿಕ್ಷಕರು, ವಿದ್ಯಾರ್ಥಿಗಳಾಗಲಿ ಶಿಸ್ತನ್ನು ಮೈಗೂಡಿಸಿಕೊಳ್ಳದಿದ್ದರೇ ನಮ್ಮ ಧ್ಯೇಯವನ್ನು ಸುಲಭವಾಗಿ ಈಡೇರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಶಿಸ್ತಿಗೆ ಆದ್ಯತೆ ನೀಡಬೇಕು ಎಂದರು.
ಮಕ್ಕಳ ಮೇಲೆ ಶಿಕ್ಷಕರು ಪ್ರಭಾವ ಬೀರಿದಷ್ಟೂ ಮತ್ಯಾರು ಬೀರಲು ಸಾಧ್ಯವಿಲ್ಲ. ಹೀಗಾಗಿ ಮಕ್ಕಳ ವ್ಯಕ್ತಿತ್ವವನ್ನು ಪರಿಪೂರ್ಣ ಮಾಡುವ ಜವಾಬ್ದಾರಿ ಶಿಕ್ಷಕರ ಮೇಲಿದೆ. ಶಿಕ್ಷಕರಾಗುವ ಸದಾವಕಾಶ ಎಲ್ಲರಿಗೂ ಸಿಗಲ್ಲ. ಸಿಕ್ಕ ಅವಕಾಶವನ್ನು ಪ್ರಾಮಾಣಿಕವಾಗಿ, ಸಮರ್ಥವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳ ಅಂಕುಡೊಂಕು ತಿದ್ದುವ ಮೂಲಕ ಅವರ ಭವಿಷ್ಯಕ್ಕೆ ದಾರಿದೀಪವಾಗಬೇಕೆಂದರು.
ಸೆಂಟ್ ಥೆರೆಸಾ ಶಾಲೆಗೆ ಆಗಮಿಸಿದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಶಾಲಾ ವಿದ್ಯಾರ್ಥಿಗಳು ಅದ್ದೂರಿಯಾಗಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ, ಸೆಂಟ್ ಥೆರೆಸಾ ಶಾಲಾ ಸಿಬ್ಬಂದಿ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.