ಹುಬ್ಬಳ್ಳಿ: 500 ರೂ. ಸಾಲದ ವಿಚಾರಕ್ಕೆ ವ್ಯಕ್ತಿಯೊಬ್ಬನನ್ನು ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಆಟೋ ಚಾಲಕನಾಗಿದ್ದ ಈರಣ್ಣ ಹುರಕಡ್ಲಿ (45) ಮೇಲೆ ಜೂ.25 ರಂದು ಶಶಿಧರ್ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಈರಣ್ಣ ಅವರನ್ನು ತಕ್ಷಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜೂ.28ರ ರಾತ್ರಿ ಅವರು ಮೃತಪಟ್ಟಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಈರಣ್ಣ, ಶಶಿಧರ್ ಬಳಿ 500 ರೂ. ಸಾಲ ಪಡೆದಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಈ ವೇಳೆ ಶಶಿಧರ್ ಕಲ್ಲಿನಿಂದ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಘಟನೆ ಸಂಬಂಧ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.



