ಚಿಕ್ಕೋಡಿ : ರಾಜ್ಯ ಸರ್ಕಾರದ ವಿರುದ್ಧ ಬೆಳಗಾವಿ ಜಿಲ್ಲೆಯ ರೈತರು ಆಕ್ರೋಶ ವ್ಯಕ್ತಪಡಿಸಿದ್ದು, ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಸಮರ್ಪಕ ಮಳೆಯಾಗದೆ ಕೃಷಿ ಚಟುವಟಿಕೆಗಳಿಗೆ ತೀವ್ರ ಹೊಡೆತ ಬಿದ್ದಿದೆ. ಮಳೆಯ ಕೊರತೆಯಿಂದ ಮೆಕ್ಕೆಜೋಳ, ಸೋಯಾಬಿನ್, ತೊಗರಿ, ಅಲಸಂದಿ ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅಥಣಿ ತಾಲೂಕಿನಲ್ಲಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದ್ದು, ಬಾವಿಗಳು ಬತ್ತುವ ಹಂತ ತಲುಪಿವೆ. ಕೊಳವೆಬಾವಿಗಳಿಂದಲೂ ಅಲ್ಪ ಪ್ರಮಾಣದ ನೀರು ಮಾತ್ರ ಲಭ್ಯವಾಗುತ್ತಿದೆ. ಮಳೆಗಾಲದಲ್ಲೇ ಇಂತಹ ಪರಿಸ್ಥಿತಿ ಎದುರಾದರೆ, ಬೇಸಿಗೆ ದಿನಗಳಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಗೊಳ್ಳುವ ಆತಂಕ ರೈತರನ್ನು ಕಾಡುತ್ತಿದೆ.
ರಾಜ್ಯದ ಬರಪೀಡಿತ ಜಿಲ್ಲೆಗಳ ಪಟ್ಟಿಯಿಂದ ಬೆಳಗಾವಿ ಜಿಲ್ಲೆಯನ್ನು ಹೊರಗಿಟ್ಟಿರುವುದು ರೈತರ ಅಸಮಾಧಾನಕ್ಕೆ ಕಾರಣವಾಗಿದೆ. ತಕ್ಷಣ ಬೆಳಗಾವಿ ಜಿಲ್ಲೆಯನ್ನು ಬರಪೀಡಿತ ಎಂದು ಘೋಷಿಸಿ, ಮಳೆಯಿಂದ ಹಾನಿಗೊಳಗಾದ ಬೆಳೆಗಳಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಅಥಣಿ ತಾಲೂಕಿನ ರೈತರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸರ್ಕಾರ ಕೂಡಲೇ ರೈತರ ಸಂಕಷ್ಟಕ್ಕೆ ಸ್ಪಂದಿಸಿ, ಬರ ಪರಿಸ್ಥಿತಿ ಕುರಿತು ಸಮಗ್ರ ಸಮೀಕ್ಷೆ ನಡೆಸಿ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ರೈತರು ಆಗ್ರಹಿಸಿದ್ದಾರೆ.




