ಬೆಂಗಳೂರು: ಯವಕರಲ್ಲಿ ಸೇವಾ ಮನೋಭಾವ, ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸಲು ತೀರ್ಮಾನಿಸಿದ್ದೇವೆ. ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ. ಅನುದಾನವನ್ನು ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದರು.
ನಗರದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ರಾಹುಲ್ ಗಾಂಧಿಯವರು ದೇಶದ ಯುವಜನತೆಗೆ ಭಾರತದ ವೈವಿಧ್ಯಮಯ ಸಂಸ್ಕೃತಿ ಮತ್ತು ಇತಿಹಾಸದ ಸಂದೇಶವನ್ನು ತಲುಪಿಸುವ ಉದ್ದೇಶದಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 3 ಸಾವಿರಕ್ಕೂ ಹೆಚ್ಚು ಕಿ.ಮೀ.ಗಳಷ್ಟು ಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದರು. ಅದರ ನೆನಪಿಗಾಗಿ ವಿಶೇಷ ಕಾರ್ಯಕ್ರಮವನ್ನು ಘೋಷಿಸುವುದಾಗಿ ನಾವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದೆವು. ಇದೀಗ ಮುಖ್ಯಮಂತ್ರಿಗಳು ಪ್ರಸ್ತಾವನೆಯನ್ನು ಪುನರ್‌ಪರಿಶೀಲಿಸಿ, ಚರ್ಚೆಯ ಬಳಿಕ ಕಾರ್ಯಕ್ರಮಕ್ಕೆ ಅನುಮತಿ ನೀಡಿದ್ದಾರೆ ಎಂದು ವಿವರಿಸಿದರು.
ಈ ಯೋಜನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖಾಂತರ ಅನುಷ್ಠಾನ ಮಾಡಲಾಗುವುದು. ಇದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆ ಸಹಕಾರ ನೀಡಲಿದೆ. ರಾಜ್ಯದ ಪ್ರತಿಯೊಂದು ಗ್ರಾಮ ಪಂಚಾಯಿತಿಯಲ್ಲೂ ಸ್ಥಳೀಯ ಮಟ್ಟದ ಸಂಘ ರಚನೆಗೆ ಅಗತ್ಯವಾದ ಮಾರ್ಗಸೂಚಿಗಳನ್ನು ಜು.13 ರಂದು ಬಿಡುಗಡೆಗೊಳಿಸಿರುವುದಾಗಿ ತಿಳಿಸಿದರು.
100 ರಿಂದ 250 ಸದಸ್ಯರೊಳಗಿನ ಸಂಘವನ್ನು ರಚಿಸಲಾಗುತ್ತದೆ. ಈ ಸಂಘಗಳು ಕ್ರೀಡಾ ಚಟುವಟಿಕೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಸ್ವಾತಂತ್ರ್ಯ ದಿನಾಚರಣೆ, ಗಣರಾಜ್ಯೋತ್ಸವದಂತಹ ರಾಷ್ಟ್ರೀಯ ಹಬ್ಬಗಳ ಮಹತ್ವವನ್ನು ಯುವಕರಿಗೆ ತಿಳಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು. ಪ್ರತಿ ವರ್ಷ ಪ್ರತಿ ಸಂಘಕ್ಕೆ ತಲಾ 10 ಲಕ್ಷ ರೂ. ಅನುದಾನ ನೀಡಲು ನಾವು ತೀರ್ಮಾನಿಸಿದ್ದೇವೆ. ಯುವಕರ ಸಬಲೀಕರಣಕ್ಕಾಗಿ ಸಾವಿರ ಕೋಟಿಯವರೆಗೆ ಅನುದಾನ ವ್ಯಯಿಸಿದರೂ ಅದರಲ್ಲಿ ತಪ್ಪಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳ ನೇತೃತ್ವದ ಸಚಿವ ಸಂಪುಟದಲ್ಲಿ ಸುದೀರ್ಘವಾಗಿ ಚರ್ಚಿಸಿರುವುದಾಗಿ ಮಾಹಿತಿ ನೀಡಿದರು.
ಕ್ರೀಡಾ ಇಲಾಖೆಯಿಂದ ಸಮಿತಿಗಳ ಸದಸ್ಯತ್ವದ ಕುರಿತು ಮಾರ್ಗಸೂಚಿಗಳನ್ನು ಸಹ ಬಿಡುಗಡೆ ಮಾಡಿದ್ದೇವೆ. ಸದಸ್ಯತ್ವವನ್ನು ಹೇಗೆ ನೀಡಬೇಕು, ಯಾರು ಸದಸ್ಯರಾಗಬೇಕು, ಎಲ್ಲ ಸಮುದಾಯಗಳಿಗೂ ಅವಕಾಶ ಸಿಗುವಂತೆ ಸಮಿತಿಗಳನ್ನು ಹೇಗೆ ರಚಿಸಬೇಕು ಎಂಬುದರ ಬಗ್ಗೆ ಸ್ಪಷ್ಟ ನಿರ್ದೇಶನಗಳನ್ನು ನೀಡಲಾಗಿದೆ. ಈ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರುವ ಉದ್ದೇಶ ಹೊಂದಿದ್ದೇವೆ. ಮುಂದಿನ 15 ರಿಂದ 20 ದಿನದೊಳಗೆ, ಗರಿಷ್ಠ ಒಂದು ತಿಂಗಳ ಕಾಲಾವಧಿಯಲ್ಲಿ ರಾಜ್ಯದಾದ್ಯಂತ ಸಮಿತಿಗಳ ರಚನೆಯನ್ನು ಪೂರ್ಣಗೊಳಿಸಿ, ಅವುಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.




