ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 51 ಸಾವಿರ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.
2026-27ನೇ ಶೈಕ್ಷಣಿಕ ಸಾಲು ಮೇ ತಿಂಗಳಿನಿಂದಲೇ ಆರಂಭವಾಗುತ್ತಿರುವುದರಿಂದ, ಶಾಲೆಗಳ ಆರಂಭದಲ್ಲೇ ಶಿಕ್ಷಕರ ಕೊರತೆಯಾಗದಂತೆ ತಡೆಯಲು ಈ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ಪ್ರಾಥಮಿಕ ಶಾಲೆಗಳಿಗೆ 40 ಸಾವಿರ, ಪ್ರೌಢಶಾಲೆಗಳು11 ಸಾವಿರ ಶಿಕ್ಷಕರ ನೇಮಕಾತಿಗೆ ಅನುಮತಿ ಸಿಕ್ಕಿದೆ.
ಈ ನೇಮಕಾತಿಯು ಕೇವಲ ತಾತ್ಕಾಲಿಕ ವ್ಯವಸ್ಥೆಯಾಗಿದ್ದು, ಖಾಯಂ ಶಿಕ್ಷಕರು ನೇಮಕವಾಗುವವರೆಗೆ ಅಥವಾ ಪ್ರಸ್ತುತ ಶೈಕ್ಷಣಿಕ ವರ್ಷದ (2026-27) ಅಂತ್ಯದವರೆಗೆ ಮಾತ್ರ ಅನ್ವಯಿಸುತ್ತದೆ.
ಶೈಕ್ಷಣಿಕ ವರ್ಷದ ಆರಂಭದಲ್ಲೇ ಅತಿಥಿ ಶಿಕ್ಷಕರು ಲಭ್ಯವಾಗುವುದರಿಂದ ವಿದ್ಯಾರ್ಥಿಗಳ ನಿರಂತರ ಕಲಿಕೆಗೆ ಮತ್ತು ಶಾಲಾ ಚಟುವಟಿಕೆಗಳ ಸುಗಮ ನಿರ್ವಹಣೆಗೆ ಅನುಕೂಲವಾಗಲಿದೆ.
ಅತಿಥಿ ಶಿಕ್ಷಕರ ಗೌರವಧನ ಪಾವತಿಗೆ ಅಗತ್ಯವಿರುವ ಅನುದಾನದ ವಿವರ ಹಾಗೂ ಜಿಲ್ಲಾ/ತಾಲ್ಲೂಕುವಾರು ಹಂಚಿಕೆಯ ಸಂಪೂರ್ಣ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.



