ಚಿಕ್ಕಬಳ್ಳಾಪುರ: ಪತ್ನಿಯನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಪತಿ, ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಲಾಡ್ಜ್‌ನಲ್ಲಿ ನಡೆದಿದೆ.
ಗೌರಿಬಿದನೂರು ತಾಲೂಕಿನ ನಗರಗೆರೆ ಗ್ರಾಮದ ವಿದ್ಯಾ (23) ಮೃತ ಮಹಿಳೆ. ಆಕೆಯ ಪತಿ ಆನಂದ್ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಪೊಲೀಸರ ಪ್ರಾಥಮಿಕ ಮಾಹಿತಿಯಂತೆ, ಐಡಿ ಕಾರ್ಡ್‌ನ ಟ್ಯಾಗ್‌ನಿಂದ ಕತ್ತು ಬಿಗಿದು ಉಸಿರುಗಟ್ಟಿಸಿ ವಿದ್ಯಾಳನ್ನು ಕೊಲೆ ಮಾಡಲಾಗಿದೆ. ಬಳಿಕ ಆಕೆಯ ಮೊಬೈಲ್ ತೆಗೆದುಕೊಂಡು ಆನಂದ್ ಲಾಡ್ಜ್‌ನಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.
ವಿದ್ಯಾ ಹಾಗೂ ಆನಂದ್ ಸುಮಾರು ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ದಂಪತಿಗೆ ಒಂದು ಗಂಡು ಮಗುವಿದೆ. ದಂಪತಿ ದೊಡ್ಡಬಳ್ಳಾಪುರ ನಗರದ ಗಾಂಧಿನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಕಳೆದ ಆರು ತಿಂಗಳಿಂದ ದಂಪತಿ ನಡುವೆ ಕೌಟುಂಬಿಕ ಕಲಹ ನಡೆಯುತ್ತಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾ ಸುಮಾರು ಎರಡು ತಿಂಗಳ ಹಿಂದೆ ಗಂಡನಿಂದ ದೂರವಾಗಿ ಬೆಂಗಳೂರಿನ ಪಿಜಿಯೊಂದರಲ್ಲಿ ವಾಸವಾಗಿದ್ದರು.
ಇತ್ತ ಪತ್ನಿ ಕಾಣೆಯಾಗಿರುವ ಬಗ್ಗೆ ಆನಂದ್ ದೊಡ್ಡಬಳ್ಳಾಪುರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದ ಎನ್ನಲಾಗಿದೆ. ಸುಮಾರು 20 ದಿನಗಳ ಹಿಂದೆ ವಿದ್ಯಾಳನ್ನು ಪೊಲೀಸರು ಕರೆಸಿ ಇಬ್ಬರಿಗೂ ಬುದ್ಧಿವಾದ ಹೇಳಿ ಮತ್ತೆ ಗಂಡನ ಜೊತೆ ಕಳುಹಿಸಿದ್ದರು. ಆದರೆ ಬುಧವಾರ ಅದೇನಾಯ್ತೋ ಏನೋ ವಿದ್ಯಾಳನ್ನು ಲಾಡ್ಜ್‌ಗೆ ಕರೆದುಕೊಂಡು ಬಂದ ಆನಂದ್, ಅಲ್ಲಿಯೇ ಆಕೆಯನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಘಟನೆ ಸಂಬಂಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಆನಂದ್‌ಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆನಂದ್ ಸಿಕ್ಕ ನಂತರ ಕೊಲೆಯ ಸತ್ಯ ತಿಳಿದು ಬರಬೇಕಿದೆ.
