ಚಿಕ್ಕಬಳ್ಳಾಪುರ: ಖಾಸಗಿ ಕಂಪನಿಗೆ ಸೇರಿದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ ಪ್ರಕರಣವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ.
ಸೋಮಶೇಖರ್, ಚಂದ್ರಶೇಖರ್, ಧನುಷ್, ನಾಗಭೂಷಣ್ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 80 ಲಕ್ಷ ರೂ. ಮೌಲ್ಯದ ಕಟ್ಟಿಂಗ್ ಟೂಲ್ಸ್‌ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ.
2025ನೇ ಸಾಲಿನ ಆಡಿಟ್ ವೇಳೆ ಕಂಪನಿಯ ಸ್ಟಾಕ್‌ನಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಬಳಿಕ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಕಂಪನಿ ನೀಡಿದ ದೂರಿನ ಮೇರೆಗೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ತನಿಖೆ ನಡೆಸಿದ ಪೊಲೀಸರು ಐವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಅವರಿಂದ 80 ಲಕ್ಷ ರೂ. ಮೌಲ್ಯದ ಕಟ್ಟಿಂಗ್ ಟೂಲ್ಸ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ಕುರಿತು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.




