ಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಶ್ರೀರಂಗಪಟ್ಟಣದ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾಗೊಳಿಸಿದೆ.
ಕಳೆದ ಆಗಸ್ಟ್ 12 ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಆರತಿ ಉಕ್ಕಡದಲ್ಲಿ ಕರ್ತವ್ಯದಲ್ಲಿದ್ದ ಮಹಿಳಾ ಪಿಎಸ್‌ಐ ಸವಿತಾ ಅವರ ಮೇಲೆ ಐಶ್ವರ್ಯ ಕಪಾಳಮೋಕ್ಷ ಮಾಡಿದ್ದರು. ಈ ಘಟನೆ ಕುರಿತಂತೆ ಕ್ಯಾತನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಪ್ರಕರಣ ದಾಖಲಾದ ಬಳಿಕ ಪೊಲೀಸರು ಆರೋಪಿ ಐಶ್ವರ್ಯ ವಿಚಾರಣೆ ನಡೆಸಲಾಗಿತ್ತು. ಇತ್ತ ಬಂಧನ ಭೀತಿಯಲ್ಲಿದ್ದ ಐಶ್ವರ್ಯ, ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಶ್ರೀರಂಗಪಟ್ಟಣದ 3ನೇ ಅಪರ ಸತ್ರ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ. ಅರ್ಜಿ ವಜಾಗೊಂಡ ಬೆನ್ನಲ್ಲೇ ಪೊಲೀಸರು ಐಶ್ವರ್ಯ ಬಂಧನಕ್ಕಾಗಿ ತೀವ್ರ ಶೋಧ ನಡೆಸುತ್ತಿದ್ದಾರೆ.




