ಬೆಂಗಳೂರು: ಜಾತಿಗಣತಿಯನ್ನು ಪಡೆಯಬೇಡ ಎಂದು ಆಗ ಪುಟ್ಟರಂಗಶೆಟ್ಟಿಯವರಿಗೆ ಹೇಳಿದ್ದೇ ಆಗಿನ ಮುಖ್ಯಮಂತ್ರಿ ಕುಮಾರಸ್ವಾಮಿಯವರು. ಆದರೆ ನಾವು ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಶಾಖಾ ಮಠದ ಭೂಮಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು. ಎಲ್ಲಾ ಶೋಷಿತ ಸಮುದಾಯಗಳಿಗೂ ಮಹಾಸಂಸ್ಥಾನ ಆಗಬೇಕು ಎಂಬ ಉದ್ದೇಶದಿಂದ ಕಾಗಿನೆಲೆ ಮಹಾಸಂಸ್ಥಾನವನ್ನು ಸ್ಥಾಪಿಸಲಾಗಿದೆ. ಆದ್ದರಿಂದ ಇದು ಕೇವಲ ಒಂದು ಜಾತಿ ಅಥವಾ ಸಮಾಜದ ಮಠವಲ್ಲ, ಎಲ್ಲಾ ಶೋಷಿತ ಸಮಾಜಗಳಿಗೆ ಸೇರಿದ ಮಹಾ ಸಂಸ್ಥಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶೋಷಿತ ಸಮುದಾಯಗಳಿಗೆ ಧ್ವನಿ ಆಗುವ ಉದ್ದೇಶದಿಂದ ರಾಜ್ಯಾದ್ಯಂತ ಪ್ರವಾಸ ಮಾಡಿ ಸಮುದಾಯವನ್ನು ಒಟ್ಟಾಗಿಸಿ ಮಹಾಸಂಸ್ಥಾನಕ್ಕೆ ನಾಂದಿ ಹಾಡಲಾಯಿತು. ಮೊದಲ ಸ್ವಾಮೀಜಿ ತಾರಕಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಾಮಾಜಿಕ ಚಟುವಟಿಕೆ ಮಾಡಿಕೊಂಡು ಬರುತ್ತಿತ್ತು. ಈಗ ನಿರಂಜನಾನಂದಪುರಿ ಶ್ರೀಗಳ ಸಾನ್ನಿಧ್ಯದಲ್ಲಿ ಸಮಾಜಮುಖಿ ಕಾರ್ಯಗಳು ನಡೆಯುತ್ತಿವೆ ಎಂದಿದ್ದಾರೆ.
ನಾವು ಚುನಾವಣೆ ವೇಳೆ ನೀಡಿರುವ 5 ಗ್ಯಾರಂಟಿಗಳನ್ನು ಎಷ್ಟೇ ಕಷ್ಟ ಬಂದರೂ ಜಾರಿ ಮಾಡುತ್ತೇವೆ. ಯಾರೇ ಆಡಿಕೊಂಡರೂ ಈ ವರ್ಷದ ಬಜೆಟ್‍ನಲ್ಲೇ 5 ಘೋಷಣೆಗಳಿಗೂ ಹಣ ಕೊಡುತ್ತೇವೆ. ನಮ್ಮ ಘೋಷಣೆಗಳು ಜಾತಿ-ಧರ್ಮ ಮೀರಿರುವಂತಹ ಘೋಷಣೆಗಳಾಗಿದೆ ಎಂದರು.