ಬೆಳಗಾವಿ : ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಡಿಸಿಸಿ ಬ್ಯಾಂಕ್ ಸಿಬ್ಬಂದಿ ದಿಢೀರ್ ಪ್ರತಿಭಟನೆ ನಡೆಸಿದರು. ಅಷ್ಟೆ ಅಲ್ಲದೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿಗೆ ಮುತ್ತಿಗೆ ಹಾಕಿ ಸಿಬ್ಬಂದಿ ಆಕ್ರೋಶ ಹೊರಹಾಕಿದರು.
ಡಿಸಿಸಿ ಬ್ಯಾಂಕ್‌ಗೆ ನಬಾರ್ಡ್ ಅಧಿಕಾರಿಗಳು ಭೇಟಿ ನೀಡಿದ್ದರು. ಈ ವೇಳೆ ಬ್ಯಾಂಕ್‌ಗೆ ಆಗಮಿಸಿದ ರಮೇಶ್ ಕತ್ತಿ ಅವರನ್ನು ಬ್ಯಾಂಕ್ ಸಿಬ್ಬಂದಿ ಮುತ್ತಿಗೆ ಹಾಕಿ, ಗೇಟ್‌ನಲ್ಲೇ ರಮೇಶ್ ಕತ್ತಿ ಅವರನ್ನು ತಡೆದು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.
ಇನ್ನು ಸಿಬ್ಬಂದಿ ದಿಢೀರ್ ಪ್ರತಿಭಟನೆ ಬೆನ್ನಲ್ಲೇ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಮೇಶ್ ಕತ್ತಿ ನೇತೃತ್ವದಲ್ಲಿ ಆಡಳಿತ ಮಂಡಳಿ ಸಭೆ ನಡೆಸಲಾಯಿತು. ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಲಕ್ಷ್ಮಣ್ ಸವದಿ, ಆನಂದ ಮಾಮನಿ, ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸೇರಿ ಇತರೆ ನಿರ್ದೇಶಕರು ಭಾಗಿಯಾಗಿದ್ದರು.
ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಐವರ ಸಮಿತಿ ರಚನೆ ಮಾಡಲಾಯಿತು. ಬರುವ ಏಪ್ರಿಲ್ 16ರೊಳಗೆ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಲಕ್ಷಣ್ ಸವದಿ ಸಿಬ್ಬಂದಿಗೆ ಭರವಸೆ ನೀಡಿದರು. ಬಳಿಕ ಪ್ರತಿಭಟನೆ ಹಿಂಪಡೆದು ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾದರು.