ಬೆಂಗಳೂರು: ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ, ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದ್ರೆ, ಇದು ಸುಳ್ಳು ಸುದ್ದಿ. ಉಸಿರಾಟದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವ ತಿಮ್ಮಕ್ಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ತಿಮ್ಮಕ್ಕ ಅವರ ದತ್ತು ಪುತ್ರ ಉಮೇಶ್ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಮಾಹಿತಿ ನೀಡಿದ್ದಾರೆ.
ಇತ್ತೀಚೆನ ದಿನಗಳಲ್ಲಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲು ಜನರಿಗೆ ಅದೇನು ಆತುರವೋ ಏನೋಮ ಬದುಕಿದ್ದವರನ್ನು ಮೃತಪಟ್ಟಿದ್ದಾರೆ ಎಂದು ಉಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಮೇಶ್ ಅವರ ಈ ಪೋಸ್ಟ್ಗೆ ಅನೇಕರು ಪ್ರತಿಕ್ರಿಯಿಸಿ, ಹೀಗೆ ಸುಳ್ಳು ಸುಳ್ಳು ಪೋಸ್ಟ್ ಹಾಕುವುದಕ್ಕೂ ಮೊದಲು ಹತ್ತು ಸಲ ಸತ್ಯಾಸತ್ಯತೆ ತಿಳಿದುಕೊಳ್ಳಬೇಕು ಎಂದಿದ್ದಾರೆ.
ಇನ್ನು ಈ ಬಗ್ಗೆ ಉಮೇಶ್ ಪ್ರತಿಕ್ರಿಯಿಸಿ, ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ.ಡಾ.ರವೀಂದ್ರ ಮೆಹ್ತಾ ವೈದ್ಯರ ತಂಡ ತಿಮ್ಮಕ್ಕಗೆ ಚಿಕಿತ್ಸೆ ನೀಡುತ್ತಿದ್ದು, ಸದ್ಯ ಸಾಲುಮರದ ತಿಮ್ಮಕ್ಕ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.
ಕಳೆದ ಮೂರ್ನಾಲ್ಕು ದಿನಗಳಿಂದ ತಿಮ್ಮಕ್ಕ ಅವರಿಗೆ ಉಸಿರಾಟದ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಮೊದಲು ಹಾಸನದ ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಆದರೂ ಸಹ ಚೇತರಿಕೆ ಕಂಡುಬಂದಿರಲಿಲ್ಲ, ಹೀಗಾಗಿ ಮೊನ್ನೆ (ಅ.03) ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದರಿಂದ ಕೂಡಲೇ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಜಯನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಾ.ರವೀಂದ್ರ ಮೆಹ್ತಾ ತಂಡ ಸಾಲುಮರದ ತಿಮ್ಮಕ್ಕರಿಗೆ ಚಿಕಿತ್ಸೆ ನೀಡುತ್ತಿದೆ.