ಬೆಂಗಳೂರು: 2023ರಲ್ಲಿ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಸಲ್ಲಿಸಲು ಇಂದು ಕೊನೆ ದಿನವಾಗಿದ್ದು, ಅಂತಿಮವಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಆಪ್ತ ಸಹಾಯಕರಿಂದ ಅರ್ಜಿ ಹಾಕಿಸಿದ್ದಾರೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಕನಕಪುರ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದರು. ಆದರೆ, ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದ ಟಿಕೆಟ್ಗಾಗಿ ಅರ್ಜಿ ಸಲ್ಲಿಸಲಿದ್ದಾರೆ ಎನ್ನುವ ತೀವ್ರ ಕುತೂಹಲ ಮೂಡಿಸಿತ್ತು..
ಇದೀಗ ಸಿದ್ದರಾಮಯ್ಯವರು ಇಂದು ತಮ್ಮ ಆಪ್ತ ಸಹಾಯಕರಾದ ಪ್ರಭಾಕರ್, ವೆಂಕಟೇಶ್ ಅವರಿಂದ ಅರ್ಜಿ ಸಲ್ಲಿಕೆ ಮಾಡಿಸಿದ್ದಾರೆ. ಆದ್ರೆ, ಯಾವ ಕ್ಷೇತ್ರದ ಟಿಕೆಟ್ ಎನ್ನುವುದನ್ನು ಮಾತ್ರ ಗುಟ್ಟು ಬಿಟ್ಟುಕೊಟ್ಟಿಲ್ಲ.
ಕ್ಷೇತ್ರದ ಹೆಸರು ಬರೆಯದೆ ಅರ್ಜಿ ಸಲ್ಲಿಸಿದ ಸಿದ್ದರಾಮಯ್ಯ, ಹೈಕಮಾಂಡ್ ಸೂಚನೆ ಮೇರೆಗೆ ಕ್ಷೇತ್ರದ ಆಯ್ಕೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರು ತಾವು ಸ್ಪರ್ಧೆ ಮಾಡುವ ಕ್ಷೇತ್ರದ ಬಗ್ಗೆ ಕಾರ್ಯಕರ್ತರು ಹಾಗೂ ಅಭಿಮಾನಿಗಳಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದ್ದಾರೆ.
ಕೇವಲ ಸ್ವಪಕ್ಷದ ನಾಯಕರು, ಕಾರ್ಯಕರ್ತರಲ್ಲಿ ಮಾತ್ರವಲ್ಲ. ವಿರೋಧ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರಲ್ಲೂ ಸಹ ಸಿದ್ದರಾಮಯ್ಯನವರು ಸ್ಪರ್ಧೆ ಮಾಡುವ ಕ್ಷೇತ್ರ ಯಾವುದು ಎಂದು ತಿಳಿದುಕೊಳ್ಳಲು ಕಾತರರಿಂದ ಕಾಯುತ್ತಿದ್ದಾರೆ. ಆದರೆ, ಸಿದ್ದರಾಮಯ್ಯ ಮಾತ್ರ ಟಿಕೆಟ್ಗಾಗಿ ಸಲ್ಲಿಸಿದ ಅರ್ಜಿಯಲ್ಲಿ ಕ್ಷೇತ್ರದ ಹೆಸರು ಮಾತ್ರ ಉಲ್ಲೇಖಿಸಿಲ್ಲ. ಇದರಿಂದ ಸಿದ್ದರಾಮಯ್ಯನವರ ನಡೆ ತೀವ್ರ ಕುತೂಹಲ ಮೂಡಿಸಿದೆ.