ದೆಹಲಿ: ಭಾರತೀಯ ಕುಸ್ತಿಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿತ್ತಿರುವ ಕುಸ್ತಿಪಟುಗಳು ನಮ್ಮ ಬೇಡಿಕೆ ಈಡೇರಿಸದೇ ಇದ್ದರೆ ಇಂದು ಸಂಜೆ 6 ಗಂಟೆಗೆ ತಾವು ಗೆದ್ದ ಪದಕಗಳನ್ನು ಗಂಗಾ ನದಿಯಲ್ಲಿ ಬಿಡುವುದಾಗಿ ಹೇಳಿದ್ದಾರೆ.
ಡಬ್ಲ್ಯುಎಫ್‌ಐ ಮುಖ್ಯಸ್ಥರು ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಿ ತಿಂಗಳಿನಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪೈಲ್ವಾನರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು, ಪ್ರತಿಭಟನಾ ನಿರತರ ವಸ್ತುಗಳನ್ನು ಅಲ್ಲಿಂದ ಖಾಲಿ ಮಾಡಿದ್ದರು. ಭಾನುವಾರದ ಘಟನೆ ನಂತರ ತೀವ್ರವಾಗಿ ನೊಂದಿರುವ ಕುಸ್ತಿಪಟುಗಳು ಈಗ ಪದಕಗಳನ್ನು ಗಂಗಾದಲ್ಲಿ ಬಿಡಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಸಾಕ್ಷಿ ಮಲಿಕ್ ಟ್ವೀಟ್ ಮಾಡಿದ್ದಾರೆ.
ದೆಹಲಿಯ ಜಂತರ್ ಮಂತರ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳು ಭಾನುವಾರ ಪ್ರತಿಭಟನಾ ಮೆರವಣಿಗೆ ನಡೆಸಲು ಮುಂದಾದಾಗ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡಿದ್ದರು. ಅಲ್ಲಿಂದ ಅವರನ್ನು ಬಲವಂತವಾಗಿ ತೆರವು ಮಾಡಿಸಿದ್ದಲ್ಲದೆ, ಅವರ ಸಾಮಾನು ಸರಂಜಾಮುಗಳನ್ನು ಪೊಲೀಸರು ಅಲ್ಲಿಂದ ಖಾಲಿ ಮಾಡಿದ್ದರು. ಈ ಘಟನೆಯಿಂದ ತೀವ್ರ ವಾಗಿ ನೊಂದಿರುವ ಕುಸ್ತಿಪಟುಗಳು ಮಂಗಳವಾರ ಸಂಜೆ 6 ಗಂಟೆಗೆ ಗಂಗಾ ನದಿಯಲ್ಲಿ ತಮ್ಮ ಪದಕಗಳನ್ನು ಬಿಟ್ಟು, ಇಂಡಿಯಾ ಗೇಟ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ.