ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ: ಸಚಿವ ಸತೀಶ್‌ ಜಾರಕಿಹೊಳಿ

Apr 11, 2024 - 11:20
 25
Google  News Join WhatsApp Join Telegram Live

ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ: ಸಚಿವ ಸತೀಶ್‌ ಜಾರಕಿಹೊಳಿ

Panchayat Swaraj Samachar News Desk.

ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಹಲವು ಏತ ನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳನ್ನು ರೂಪಿಸಿ ರೈತರು ಹಾಗೂ ಸಾರ್ವಜನಿಕರ ನೀರಿನ ಬವಣೆ ನೀಗಿಸಲು ಕೆಲಸ‌ ಮಾಡಲಾಗುತ್ತಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.

ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಪರ ಮತಯಾಚಿಸಿ ಮಾತನಾಡಿದ ಅವರು, ಈಚೆಗೆ ಅಥಣಿ ತಾಲೂಕಿನಲ್ಲಿ 2 ಸಾವಿರ ಕೋಟಿ ರೂಪಾಯಿ ನೀರಾವರಿ ಯೋಜನೆಗೆ ಚಾಲನೆ ನೀಡಿದ್ದು, ಈ ಯೋಜನೆಯಿಂದ ಸೂಮಾರು 50 ಸಾವಿರ ಎಕರೆ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದೆ. ನಿಮ್ಮ ಭಾಗದ ಹನುಮಾನ್‌ ನೀರಾವರಿ ಯೋಜನೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು.

ಕಳೆದ 30 ವರ್ಷಗಳಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಬೆಳಗಾವಿ ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದೇವೆ. ಅದೇ ಕಾರಣಕ್ಕೆ ಜನರು ನಮಗೆ ಅಧಿಕಾರ ನೀಡಿದ್ದಾರೆ. ಮನೆಯಲ್ಲಿ ಕುಳಿತರೆ ಜನ ನಮಗೆ ಬೆಂಬಲ ನೀಡುತ್ತಿರಲಿಲ್ಲ. ಮುಂದೆಯೂ ನಿಮ್ಮ ಎಲ್ಲಾ ರೀತಿಯ ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ. ಕಾರಣ ಲೋಕಸಭೆ ಚುನಾವಣೆಯಲ್ಲಿ ಪ್ರಿಯಂಕಾ ಜಾರಕಿಹೊಳಿ ಅವರಿಗೆ ಹೆಚ್ಚಿನ ಮತ ನೀಡಿ ಬಹು ಅಂತರದಿಂದ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ಇನ್ನು ಸಿಎಂ ಸಿದ್ದರಾಮಯ್ಯ ನೇತೃತ್ವದ ಐದು ಗ್ಯಾರಂಟಿ ಯೋಜನೆಗಳಿಂದ ಸರ್ವರಿಗೂ ಅನುಕೂಲವಾಗಿದೆ. ಕಾಂಗ್ರೆಸ್‌ ಪಕ್ಷ ಸರ್ವರ ಅಭಿವೃದ್ಧಿಯನ್ನ ಬಯಸುವ ಪಕ್ಷ. ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ನೀಡಿದಂತೆ ಕೇಂದ್ರದಲ್ಲಿಯೂ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮಜಲಟ್ಟಿ ಗ್ರಾಮದ ಕಾಂಗ್ರೆಸ್‌ ಪಕ್ಷದ ಮುಂಚೂಣಿ ಘಟಕದ ಕಾರ್ಯಕರ್ತರು, ಹಿರಿಯರು, ಯುವಕರು ಉಪಸ್ಥಿತರಿದ್ದರು.

Google News Join Facebook Live 24/7 Help Desk

Tags: